ಮೈಸೂರು: ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ.
ನಗರ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.
ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಕಾವೇರಿ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಿ ಅಂಗಡಿ ಮುಂಗಟ್ಟುಗಳನ್ನು ತೆರೆದಿಲ್ಲ. ನಗರದಲ್ಲಿನ ಪ್ರಮುಖ ಮಾರುಕಟ್ಟೆಯಾಗಿರುವ ದೇವರಾಜ ಮಾರುಕಟ್ಟೆ, ಚಿಕ್ಕ ಮಾರುಕಟ್ಟೆ, ಎನ್ಆರ್ ಮೋಹಲ್ಲದಲ್ಲಿರುವ ಮಾರುಕಟ್ಟೆ ಸೇರಿದಂತೆ ಬಹುತೇಕ ಎಲ್ಲಾ ಮಾರುಕಟ್ಟೆಗಳು ಬಂದ್ ಆಗಿವೆ. ಪ್ರತಿ ಬಾರಿ ಬಂದ್ ಸಂದರ್ಭದಲ್ಲಿ ಎನ್ಆರ್ ಮೊಹಲ್ಲದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿರುತಿತ್ತು.
ಆದರೆ ಇಂದು ಇಂದಿನ ಬಂದ್ ಗೆ ಎನ್ ಆರ್ ಮೊಹಲ್ಲದ ಜನತೆ ಉತ್ತಮ ಸ್ಪಂದನೆ ನೀಡಿದ್ದು ಎಲ್ಲಾ ಅಂಗಡಿಗಳನ್ನು ಮುಚ್ಚಿ ಕಾವೇರಿ ಹೋರಾಟ ಪ್ರತಿಭಟನೆಗೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ನಗರ ಹಾಗೂ ಜಿಲ್ಲೆಯಾದ್ಯಂತ ಇರುವ ಹಲವಾರು ಪೆಟ್ರೋಲ್ ಬಂಕ್ ಮಾಲೀಕರು ಸಹ ಬಂದ್ ಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.
ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವುದರಿಂದ ಖಾಸಗಿ ಹಾಗೂ ಸರಕಾರಿ ಮತ್ತು ಅನುದಾನಿತ ಶಾಲೆ ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ.
ನಗರದಲ್ಲಿನ ಎಲ್ಲಾ ಮಾಲ್ ಗಳನ್ನು ಸಹ ಮುಚ್ಚಲಾಗಿದೆ. ನಗರದಲ್ಲಿರುವ ಯಾವುದೇ ಚಿತ್ರಮಂದಿರಗಳು ಸಹ ಇಂದು ಚಿತ್ರ ಪ್ರದರ್ಶನವನ್ನು ನಡೆಸುತ್ತಿಲ್ಲ.
ನಗರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಇಲ್ಲದೆ ಇರುವುದರಿಂದ ಬಸ್ ಸಂಚಾರ ಸ್ಥಗಿತಗೊಂಡಿದೆ. ಅದೇ ರೀತಿ ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ತೆರಳುವ ಬಸ್ ನಿಲ್ದಾಣವಾಗಿರುವ ಸಬರ್ಬನ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಅತಿ ವಿರಳವಾಗಿತ್ತು.
ಇಂದು ಬೆಳಿಗ್ಗೆ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಮೈಸೂರಿಗೆ ಆಗಮಿಸಿದ ಪ್ರಯಾಣಿಕರು ತಮ್ಮ ಸ್ಥಳಗಳಿಗೆ ತೆರಳಲು ಆಗದೆ ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ಆನಂತರ ಕೆಲವು ಮಂದಿ ಬಸ್ಸು ಇರಬಹುದು ಎಂಬ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಬಸ್ ನಿಲ್ದಾಣಕ್ಕೆ ಆಗಮಿಸಿ ಮತ್ತೆ ವಾಪಸ್ ಆಗಿದ್ದಾರೆ. ಹಿಂದಿನಂತೆ ಖಾಸಗಿ ಬಸ್ ಮಾಲೀಕರು ಇಂದಿನ ಬಂದದ್ ಗೆ ತಮ್ಮ ಬೆಂಬಲ ಸೂಚಿಸಿದ್ದು ಖಾಸಗಿ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ.
ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದು ಬಸ್ತ್ ಮಾಡಲಾಗಿದೆ ಬಂದ್ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ.
ನಗರದ ವಿವಿಧ ವೃತ್ತಗಳಲ್ಲಿ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸಿ ತಮಿಳು ನಾಡು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದ್ದಾರೆ.