ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಬೆಂಬಲ ವ್ಯಕ್ತವಾಗಿದೆ.
ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಅವರನ್ನು ಕರೆತರುವ ವಾಹನಗಳ ಓಡಾಟವಿಲ್ಲ. ಅಂಗಡಿಗಳನ್ನು ಮುಚ್ಚಲಾಗಿದೆ.
ಬಿಗಿ ಪೊಲೀಸ್ ಭದ್ರತೆ
‘ಬಂದ್ ಭದ್ರತೆಗಾಗಿ ರಾಜ್ಯದಾದ್ಯಂತ 70 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಕಾವೇರಿ ನದಿ ಕೊಳ್ಳದ ಜಿಲ್ಲೆಗಳಲ್ಲಿ ಭದ್ರತೆಗೆ ಒತ್ತು ನೀಡಲಾಗಿದೆ. ಆಯಾ ಜಿಲ್ಲೆಗಳ ಎಸ್ಪಿಗಳಿಗೆ ಭದ್ರತೆ ಜವಾಬ್ದಾರಿ ವಹಿಸಲಾಗಿದೆ’ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ತಿಳಿಸಿದ್ದಾರೆ.‘ಆಯಾ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿಷೇಧಾಜ್ಞೆ ಜಾರಿ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಹಾಗೂ ಸಾರ್ವಜನಿಕರ ಹಕ್ಕುಗಳಿಗೆ ಚ್ಯುತಿ ಉಂಟು ಮಾಡಿದರೆ ಕ್ರಮ ಜರುಗಿಸಲಾಗುವುದು’ ಎಂದಿದ್ದಾರೆ.