ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್ಗೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ಸೇರಿದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್ ಮೂಲಕ ಪ್ರತಿಭಟನೆ ವ್ಯಕ್ತಪಡಿಸುವ ನಿರ್ಧಾರ ಕೈಗೊಂಡಿದೆ. ಬಂದ್ ಸಂಬಂಧ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ.
ಈ ಮಧ್ಯೆ, ರೈತರ ಪ್ರತಿಭಟನೆ ತೀವ್ರಗೊಂಡಿರುವ ಕಾರಣ ಗುಪ್ತಚರ ಇಲಾಖೆಯ ಮೈಸೂರು ವಿಭಾಗದ ಎಸ್ಪಿ ಜಯಪ್ರಕಾಶ್ ಅವರು ಜಲಾಶಯಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಜಲಾಶಯದಿಂದ ನೀರು ಹರಿಸುತ್ತಿರುವುದರಿಂದ ಹೋರಾಟ ತೀವ್ರಗೊಂಡಿದೆ. ಹೀಗಾಗಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಎಸ್ಪಿ ಜಯಪ್ರಕಾಶ್ ಅವರು ಜಲಾಶಯದ ನೀರಿನ ಮಟ್ಟ, ಹೊರಹರಿವು, ಒಳಹರಿವಿನ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಅದೇ ರೀತಿ ಜಲಾಶಯದಲ್ಲಿ ಸೀಪೇಜ್ ಇದೆಯಾ ಎಂಬುದರ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ನಂತರ ಹಿರಿಯ ಅಧಿಕಾರಿಗಳಿಗೆ ವರದಿ ಕಳುಹಿಸಲಿದ್ದಾರೆ.