ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಲೀಗ್ನ ಫೈನಲ್ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವು ಜಯಭೇರಿ ಬಾರಿಸಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಚಾಂಪಿಯನ್ಸ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ಪಡೆಗೆ ಆರಂಭಿಕ ಆಘಾತ ನೀಡುವಲ್ಲಿ ಇಂಡಿಯಾ ಬೌಲರ್ಗಳು ಯಶಸ್ವಿಯಾಗಿದ್ದರು.
ಆ ಬಳಿಕ ಬಂದ ಶೊಯೇಬ್ ಮಲಿಕ್ 36 ಎಸೆತಗಳಲ್ಲಿ 41 ರನ್ ಬಾರಿಸಿದರೆ, ಮಿಸ್ಬಾ ಉಲ್ ಹಕ್ 18 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಪಾಕಿಸ್ತಾನ್ ಚಾಂಪಿಯನ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 156 ರನ್ ಕಲೆಹಾಕಿತು.
ಇಂಡಿಯಾ ಚಾಂಪಿಯನ್ಸ್ ಭರ್ಜರಿ ಬ್ಯಾಟಿಂಗ್:
157 ರನ್ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಇಂಡಿಯಾ ಚಾಂಪಿಯನ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ರಾಬಿನ್ ಉತ್ತಪ್ಪ ಕೇವಲ 10 ರನ್ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಇದಾಗ್ಯೂ ಮರ್ತೋರ್ವ ಆರಂಭಿಕ ಅಂಬಾಟಿ ರಾಯುಡು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.
ಪಾಕಿಸ್ತಾನ್ ಚಾಂಪಿಯನ್ಸ್ ಬೌಲರ್ಗಳನ್ನು ದಿಟ್ಟವಾಗಿ ಎದುರಿಸಿದ ರಾಯುಡು 30 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 50 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸುರೇಶ್ ರೈನಾ ಕೇವಲ 3 ರನ್ಗಳಿಸಿ ವಿಎಕಟ್ ಒಪ್ಪಿಸಿದರು.
ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಗುರುಕೀರತ್ ಸಿಂಗ್ ಮಾನ್ 34 ರನ್ ಕಲೆಹಾಕಲು 33 ಎಸೆತಗಳನ್ನು ಎದುರಿಸಿದರು. ಪರಿಣಾಮ ಪಂದ್ಯವು ರೋಚಕಘಟ್ಟದತ್ತ ಸಾಗಿತು. ಈ ಹಂತದಲ್ಲಿ ಕಣಕ್ಕಿಳಿದ ಯೂಸುಫ್ ಪಠಾಣ್ 16 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 30 ರನ್ ಸಿಡಿಸುವ ಮೂಲಕ ಪಂದ್ಯವು ಮತ್ತೆ ಇಂಡಿಯಾದತ್ತ ವಾಲುವಂತೆ ನೋಡಿಕೊಂಡರು.
ಅಂತಿಮವಾಗಿ ಯುವರಾಜ್ ಸಿಂಗ್ ಅಜೇಯ 15 ರನ್ ಹಾಗೂ ಇರ್ಫಾನ್ ಪಠಾಣ್ ಅಜೇಯ 5 ರನ್ಗಳೊಂದಿಗೆ ಇಂಡಿಯಾ ಚಾಂಪಿಯನ್ಸ್ ತಂಡವನ್ನು 19.1 ಓವರ್ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಪಾಕಿಸ್ತಾನ್ ಚಾಂಪಿಯನ್ಸ್ ತಂಡವನ್ನು 5 ವಿಕೆಟ್ಗಳಿಂದ ಬಗ್ಗು ಬಡಿದು ಇಂಡಿಯಾ ಚಾಂಪಿಯನ್ಸ್ ಚೊಚ್ಚಲ ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.