ಮೈಸೂರು: ಹಿಂದೊಮ್ಮೆ ವೈಎಸ್ ಟಿ ಟ್ಯಾಕ್ಸ್ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕೆಯನ್ನೇ ಹೊಲುವಂತೆ ಮತ್ತೊಂದು ವಿಡಿಯೋವೊಂದು ಚರ್ಚೆಗೆ ಗ್ರಾಸವಾಗಿದೆ.
ವಿಡಿಯೋನಲ್ಲಿ ಏನಿದೆ:
ಸಿಎಂ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ವೈಎಸ್ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡಿದ್ದರು. ಈ ಬೆನ್ನಲ್ಲೆ ಸಾರ್ವಜನಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ. ಜನಸಂಪರ್ಕ ಸಭೆಯಲ್ಲಿ ಯತೀಂದ್ರ ಅವರು ದೂರವಾಣಿ ಕರೆ ಮಾಡಿ “ಅಪ್ಪ ಹೇಳಿ” ಅಂತ ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಸಿದ್ಧರಾಮಯ್ಯ ಅವರು, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸುತ್ತಾರೆ. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ಮಹದೇವ್ ಯಾಕೆ ಯಾವುದು ಯಾವುದೋ ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಎಂದು ಪ್ರಶ್ನೆ ಮಾಡಿದ್ದಾರೆ.
ಇಲ್ಲ ಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿ ಅಂತ ಹೇಳುವಂತೆ ಯತೀಂದ್ರ ಅವರು ಮಹದೇವರಿಗೆ ಸೂಚಿಸಿರುವುದು ವಿಡಿಯೋದಲ್ಲಿ ಕಾಣಬಹುದು. ಇದೀಗ ಈ ವಿಡಿಯೋ ವೈರಲ್ ಆಗಿದ್ದು ಸರ್ಕಾರದ ವಿರುದ್ದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮುಗಿಬಿದ್ದಿದ್ದು ಚರ್ಚೆಗೂ ಗ್ರಾಸವಾಗಿದೆ.