ಮೈಸೂರು:- ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯದ ಪ್ರತಿ ಪಂಚಾಯತ್ ಮಟ್ಟದಲ್ಲೂ ಟಾಸ್ಕ್ಫೋರ್ಸ್ ರಚಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು.
ಇಂದು ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮಳೆಯಿಂದ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಇನ್ನೂ ಹೆಚ್ಚು ಮಳೆ ಆದರೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಗುರುತಿಸಿಕೊಂಡಿರಬೇಕು ಎಂದರು.