ಮೈಸೂರು: ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ನನ್ನದು ಯಾವುದೇ ಬೇಡಿಕೆ ಇಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷ ಸೂಚಿಸಿದರೆ ನಾನು ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗುತ್ತೇನೆ. ಪಕ್ಷದ ಮಾತನ್ನು ನಾನು ಕೇಳಲೇಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲಬೇಕು. ವಿಧಾನಸಭಾ ಚುನಾವಣೆಯಲ್ಲಿ ನಮ್ಮನ್ನ ಜನ ಗೆಲ್ಲಿಸಿದ್ದಾರೆ. ಬಿಜೆಪಿ ದುರಾಡಳಿತ ನೋಡಿ ಬೇಸತ್ತು ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಗ್ಯಾರೆಂಟಿ ಯೋಜನೆಗಳನ್ನ ಜಾರಿಗೊಳಿಸುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲೋಕೆ ತಂತ್ರಗಾರಿಕೆ ಮಾಡಬೇಕು ಎಂದಿದ್ದಾರೆ.
ಇದೇ ವೇಳೆ ಜೆಡಿಎಸ್-ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಶಾಸಕ, ಪ್ರತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿವೆ. ಅಧಿಕೃತವಾಗಿ ಅಥವಾ ಪರೋಕ್ಷವಾಗಿ ಮೈತ್ರಿ ಮಾಡಿಕೊಂಡಿರುತ್ತಾರೆ. 2018 ಹಾಗೂ 2023ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದರು. ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಎದುರಿಸುತ್ತೇವೆ ಎಂದು ಹೇಳಿದ್ದಾರೆ.