ಮೈಸೂರು: 2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಾಲಿ ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಮೈಸೂರು ಜಿಲ್ಲೆಯ ವಿವಿಧ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು.
ರಾಜ್ಯದ ವಿಧಾನಸಭಾ ಚುನಾವಣೆಯ ಅತ್ಯಂತ ಪ್ರಬಲವಾದ ಸ್ಪರ್ಧಾ ಕಣಗಳಲ್ಲೊಂದಾಗಿರುವ ವರುಣಾದಲ್ಲಿ, ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಾಲಿ ವಸತಿ ಸಚಿವ ವಿ. ಸೋಮಣ್ಣ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಅರಮನೆಯ ಎದುರು ಇರುವ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಗಣಪತಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಅವರಿಗೆ ಬಿಜೆಪಿ ಮುಖಂಡರಾದ ರವಿಶಂಕರ್ ಸೇರಿದಂತೆ ಹಲವರು ಸಾಥ್ ನೀಡಿದರು. ಬಳಿಕ ನಂಜನಗೂಡಿನ ಗುಳೂರಿನಲ್ಲಿ ಕಾರ್ಯಕರ್ತರ ಬಹಿರಂಗ ಸಭೆ ನಡೆಸಿದರು.
ನಂತರ ಬೆಳಿಗ್ಗೆ 11ಗಂಟೆಗೆ ಅಪಾರ ಬೆಂಬಲಿಗರೊಂದಿಗೆ ತೆರಳಿ ನಂಜನಗೂಡು ತಹಶೀಲ್ದಾರ್ ಕಛೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಮೈಸೂರು ತಾಲೂಕು ಕಛೇರಿಯಲ್ಲಿ ಬೆಳಿಗ್ಗೆ 11ಗಂಟೆಗೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂದೇಶ್ ಸ್ವಾಮಿ(ಸತೀಶ್) ಅವರು ಮಧ್ಯಾಹ್ನ 12ಗಂಟೆಗೆ ಕ್ಯಾತಮಾರನಹಳ್ಳಿಯ ಹುಲಿಯಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್.ನಾಗೇಂದ್ರ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಪೂಜೆ ಸಲ್ಲಿಸಿ ಬೆಳಿಗ್ಗೆ 10ಗಂಟೆಗೆ ನಗರಪಾಲಿಕೆ ಕಛೇರಿಗೆ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ಅವರು ಬೆಳಿಗ್ಗೆ 10ಗಂಟೆಗೆ ವಿದ್ಯಾರಣ್ಯಪುರಂನಲ್ಲಿರುವ ಚಾಮುಂಡಿವನದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕಾಂಗ್ರೆಸ್ ಮುಖಮಡರುಗಳು, ಕಾರ್ಯಕರ್ತರುಗಳು, ಹಿತೈಷಿಗಳು, ಅಭಿಮಾನಿಗಳ ಜೊತೆಗೂಡಿ ಮಹಾನಗರಪಾಲಿಕೆಯವರೆಗೆ ಪಾದಯಾತ್ರೆಯ ಮೂಲಕ ಸಾಗಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಅವರು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಒಂದು ಗಂಟೆಗೆ ಸರಿಯಾಗಿ ಆರ್ ಗೇಟ್ ವೃತ್ತದ ಮೂಲಕ ಅಪಾರ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಕಾಲ್ನಡಿಗೆಯಲ್ಲಿ ಜಾಥಾ ಹೊರಟು ನಜರ್ ಬಾದ್ ನ ಮೈಸೂರು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.