ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿರುದ್ಧ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಪತ್ರ ಅಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಈ ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ದೂರು ನೀಡಿದ್ದಾರೆ. ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ’ ಎಂದಿದ್ದಾರೆ.
ಸತ್ಯಾಸತ್ಯತೆ ತಿಳಿಯಲು ತನಿಖೆ: ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ‘ಕೆಲಸ ನಿಲ್ಲಿಸಿಲ್ಲ. ತನಿಖೆ ಆಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ’ಎಂದರು.
ಉಡುಪಿ ವಿಡಿಯೋ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಮಾಡಲಾಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ, ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿಗೆ ವಹಿಸಲಾಗಿದೆ ಎಂದರು.
ಶಾಸಕ ಯಶ್ ಪಾಲ್ ಸುವರ್ಣ ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ‘ಸಿಐಡಿಗೆ ಕೊಟ್ಟರೂ ಬೇಡ ಎನ್ನುತ್ತಾರೆ.
ಅವರ ಕಾಲದಲ್ಲಿ ಸಿಐಡಿಗೆ ಕೊಟ್ಟಿದ್ದ ಪ್ರಕರಣಗಳು ಮುಚ್ಚಿಹೋಗಿವೆಯೇ’ ಎಂದರು.