ಚಾಮರಾಜನಗರ: ಜಿಲ್ಲೆಯಲ್ಲಿ ಮತ್ತೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿದ್ದು, 2023-24ನೇ ಸಾಲಿನ ಮೊದಲ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ 21 ಬಾಲ್ಯ ವಿವಾಹ ನಡೆದಿದೆ. 11 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿದೆ.
ಈ ವರ್ಷದ ಏಪ್ರಿಲ್ 66 ಬಾಲ್ಯ ವಿವಾಹದ ದೂರುಗಳು ದಾಖಲಾಗಿವೆ. ಈ ಪೈಕಿ ಅಧಿಕಾರಿಗಳು 47 ಪ್ರಕರಣಗಳಲ್ಲಿ ಬಾಲ್ಯ ವಿವಾಹವನ್ನು ತಡೆಯಲು ಯಶಸ್ವಿಯಾಗಿದ್ದಾರೆ. 19 ಬಾಲಕಿಯರಿಗೆ ಅಧಿಕಾರಿಗಳು ಮಧ್ಯ ಪ್ರವೇಶ ಮಾಡುವ ಮೊದಲೇ ಮದುವೆ ನಡೆದಿದೆ. 10 ಪ್ರಕರಣಗಳಲ್ಲಿ ಠಾಣೆಯಲ್ಲಿ ದೂರು ದಾಖಲಿಸಿ, ಬಾಲಕಿ ಹಾಗೂ ವರನ ಕಡೆಯವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
`ಮೇ ತಿಂಗಳಲ್ಲಿ 28 ದೂರುಗಳು ದಾಖಲಾಗಿವೆ. 26 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಎರಡು ಪ್ರಕರಣಗಳಲ್ಲಿ ಮದುವೆ ನಡೆದಿದೆ. ಎರಡು ಪ್ರಕರಣಗಳಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 20 ಪ್ರಕರಣಗಳಿಗೆ ತಡೆಯಾಜ್ಞೆ ನೀಡಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಮೂರು ಪ್ರಕರಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿ ಅಂಶಗಳ ಪ್ರಕಾರ 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಮೂರು ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿದ್ದವು.
ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ 48 ದೂರುಗಳು ಸಹಾಯವಾಣಿ/ಅಧಿಕಾರಿಗಳಿಗೆ ಬಂದಿದ್ದವು. ಈ ಪೈಕಿ 45 ದೂರುಗಳಿಗೆ ಸಂಬAಧಿಸಿದAತೆ ಬಾಲ್ಯವಿವಾಹನಗಳನ್ನು ತಡೆಯಲಾಗಿತ್ತು.
ಚಾಮರಾಜನಗರ ತಾಲ್ಲೂಕಿನಲ್ಲಿ 12, ಸಂತೇಮರಹಳ್ಳಿ ಭಾಗದಲ್ಲಿ ಐದು, ಕೊಳ್ಳೇಗಾಲ ತಾಲ್ಲೂಕಿನಲ್ಲಿ 22, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಎಂಟು, ಯಳಂದೂರಿನಲ್ಲಿ ಒಂದು ದೂರುಗಳು ಬಂದಿದ್ದವು.
ಕಟ್ಟುನಿಟ್ಟಿನ ಸೂಚನೆ: ಜಿಲ್ಲೆಯಲ್ಲಿ ಈ ವರ್ಷ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಪೂವಿತಾ ಎಸ್. `ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಇರುವ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸಬೇಕು’ ಎಂದು ತಾಕೀತು ಮಾಡಿದ್ದಾರೆ.
ಸಹಕರಿಸಲು ಮನವಿ: `ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ್ಯವಿವಾಹ ನಡೆಯುತ್ತಿದ್ದರೆ ಸಾರ್ವಜನಿರು ನಿರ್ಭೀತಿಯಿಂದ ಮಾಹಿತಿ ನೀಡಬೇಕು. ಮಾಹಿತಿದಾರರ ವಿವರಗಳನ್ನು ಗೋಪ್ಯವಾಗಿ ಇಡಬಹುದು. ಜಿಲ್ಲೆಯಲ್ಲಿ ಬಾಲ್ಯವಿವಾಹವನ್ನು ತಡೆಗಟ್ಟುವಲ್ಲಿ ಸಂಬAಧಿಸಿದ ಎಲ್ಲ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು’ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗೀತಾಲಕ್ಷಿ÷್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ: ಎಲ್ಲಿಯೇ ಆದರೂ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಮದುವೆ ಮಾಡುತ್ತಿರುವ ವಿಷಯ ತಿಳಿದ ಕೂಡಲೇ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.