ಪಿರಿಯಾಪಟ್ಟಣ : ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸಿ ಎಂದು ಕಂಪಲಾಪುರ ಗ್ರಾಮಪಂಚಾಯಿತಿ ಪಿಡಿಓ ಪರಮೇಶ್ ಅವರು ಹೇಳಿದರು.
ತಾಲ್ಲೂಕಿನ ಕಂಪಲಾಪುರ ಗ್ರಾಮಪಂಚಾಯಿತಿ ಆವರಣದಲ್ಲಿ ಸೋಮವಾರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನೆಲೆ ಆಯೋಜಿಸಿದ್ದ ಮತದಾನ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ನಾವೆಲ್ಲರೂ ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾಗಿದ್ದೇವೆ. ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮ ಕರ್ತವ್ಯವಾಗಿದೆ. ಮತದಾನ ನಮ್ಮ ಹಕ್ಕು, ಅದನ್ನು ಯಾವುದೇ ಆಮಿಷಗಳಿಗೆ ಒಳಗಾಗದೇ ಕಡ್ಡಾಯವಾಗಿ ಚಲಾಯಿಸಬೇಕು ಎಂದರು.
ಈ ಸಂದರ್ಭ ಸಿಡಿಪಿಯು ಮಮತಾ, ಸೆಕ್ಟರ್ ಅಧಿಕಾರಿ ಹಾಗೂ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಪುಷ್ಪಲತಾ, ಗ್ರಾ.ಪಂ ಕಾರ್ಯದರ್ಶಿ ಸುಷ್ಮಾ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಸೇರಿದಂತೆ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.