ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಅಧಿಕಾರಿಯೊಬ್ಬರ ತಲೆದಂಡವಾಗಿದೆ. ಹಗರಣದ ಆರೋಪವಾಗುತ್ತಿದ್ದಂತೆ ಮುಡಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರಕಾರ, ಈಗ ಅಮಾನತು ಮಾಡಿದೆ.
ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ರಾಜ್ಯ ಸರಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಮುಡಾ ಹಗರಣದ ಬೆನ್ನಲ್ಲೇ ಸರಕಾರದ ದಿನೇಶ್ ಕುಮಾರ್ ಅವರನ್ನು ವರ್ಗಾವಣೆ ಗೊಳಿಸಿತ್ತು. ಕೆಲ ದಿನಗಳವರೆಗೂ ಯಾವುದೇ ಹುದ್ದೆ ನೀಡಿರಲಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಹಾವೇರಿಯ ವಿವಿಯ ರಿಜಿಸ್ಟಾçರ್ ಆಗಿ ನೇಮಕ ಮಾಡಿ ಆದೇಶ ಮಾಡಲಾಗಿತ್ತು.
ಅಧಿಕಾರ ಸ್ವೀಕರಿಸುವ ಮುನ್ನವೇ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಮಂದಿ ಬಿಜೆಪಿ ನಾಯಕರು, ದಿನೇಶ್ ಕುಮಾರ್ ಅವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬೆಳವಣಿಗೆ ನಡುವೆ ಇಲಾಖೆಯ ವಿಚಾರಣೆಯನ್ನು ಕಾಯ್ದಿರಿಸಿ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.