ಚೆನ್ನೈ: ತಮಿಳುನಾಡಿನ ವಿಲ್ಲುಪುರಂ ಹಾಗೂ ಚೆಂಗಲ್ಪೇಟ್ ಜಿಲ್ಲೆಗಳಲ್ಲಿ ನಡೆದ 2 ಪ್ರತ್ಯೇಕ ಘಟನೆಗಳಲ್ಲಿ ಕಳ್ಳಭಟ್ಟಿ ಸೇವಿಸಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.
ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಪ್ರದೇಶದಲ್ಲಿ 6 ಜನರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಸಂಜೆಯ ವೇಳೆಗೆ ಚೆಂಗಲ್ಪೇಟ್ ಜಿಲ್ಲೆಯ ಮಧುರಾಂತಕಂ ಬಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ತಮಿಳುನಾಡಿನಲ್ಲಿ ಕಳ್ಳಭಟ್ಟಿ ದುರಂತದ ಬಳಿಕ ಒಟ್ಟು 7 ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮರಕ್ಕನಂ ಮತ್ತು ಮದುರಾಂತಕಂ ಪ್ರದೇಶಗಳ ನಡುವೆ ಕೇವಲ 50 ಕಿಮೀ ಅಂತರವಿದ್ದು, ಎರಡು ಘಟನೆಗಳಿಗೆ ಸಂಬಂಧವಿದೆಯೇ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಮರಕ್ಕನಂ ಬಳಿಯ ಎಕ್ಕಿಯಾರ್ ಕುಪ್ಪಂನ ನಿವಾಸಿಗಳು ಶನಿವಾರ ಸಂಜೆ ಕಳ್ಳಭಟ್ಟಿ ಸೇವಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಹಲವರು ಅಸ್ವಸ್ಥಗೊಂಡಿದ್ದು, ಅವರನ್ನು ಪುದುಚೇರಿ ಮತ್ತು ವಿಲ್ಲುಪುರಂನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಆಸ್ಪತ್ರೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಮತ್ತೊಂದು ಗ್ರಾಮದಿಂದಲೂ ಸಾವಿನ ಸುದ್ದಿಗಳು ಕೇಳಿಬಂದಿದೆ. ಇನ್ನೂ ಹಲವು ಪ್ರದೇಶದ ವಿವಿಧ ಆಸ್ಪತ್ರೆಗಳಿಗೆ ಜನರು ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ರಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಕೆಲವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೃತರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.