ಮೈಸೂರು: ‘ಸಿದ್ದರಾಮಯ್ಯ ಅವರು ಪೂರ್ಣಾವಧಿಯವರೆಗೂ (ಐದು ವರ್ಷ) ಮುಖ್ಯಮಂತ್ರಿ ಆಗಿರಲಿದ್ದಾರೆ’ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ಜಿಲ್ಲೆಯ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಸೋಮವಾರ ಭೇಟಿಯಾಗಿ ಆಶೀರ್ವಾದ ಪಡೆದು ಕೆಲಹೊತ್ತು ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
‘ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ ಬಳಿಕವೂ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ. ಸಿದ್ದರಾಮಯ್ಯ ಐದು ವರ್ಷಗಳೂ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ’ ಎಂದು ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸಿದರು.
‘ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದ ಪಿಎಸ್ಐ ನೇಮಕಾತಿ ಹಗರಣ, ಆರೋಗ್ಯ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳ ಹಗರಣಗಳ ಬಗ್ಗೆಯೂ ತನಿಖೆ ನಡೆಸುತ್ತೇವೆ. ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ನೊಂದವರಿಗೆ ನ್ಯಾಯ ಕೊಡಿಸುತ್ತೇವೆ’ ಎಂದು ಭರವಸೆ ನೀಡಿದರು.
‘ಗ್ಯಾರಂಟಿಗಳನ್ನು ಜಾರಿಗೊಳಿಸಿಯೇ ತೀರುತ್ತೇವೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ’ ಎಂದರು.