ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರವೂ ಮಳೆಯ ತೀವ್ರತೆ ಮುಂದುವರೆದಿದೆ. ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ.
ಪರೀಕ್ಷೆ ಹಿನ್ನೆಲೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಜಿಲ್ಲೆಯ ಅಂಗನವಾಡಿ, ಶಾಲೆ, ಹಾಗೂ ಪಿಯು ಕಾಲೇಜಿಗೆ ಮಂಗಳವಾರವೂ ರಜೆ ಘೋಷಿಸಿ ಕೊಡಗು ಡಿಸಿ ವೆಂಕಟ್ ರಾಜ್ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಭಾರೀ ಅವಾಂತರಗಳು ಸೃಷ್ಟಿಯಾಗಿದೆ. ಕೊಡಗಿನ ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಾವೇರಿ ಹಾಗೂ ಉಪನದಿಗಳು ಮೈದುಂಬಿ ಹರಿಯುತ್ತಿವೆ. ಭಾಗಮಂಡಲದ ತ್ರಿವೇಣಿ ಸಂಗಮದ ನೀರು ಭಂಗಢೇಶ್ವರ ದೇವಾಲಯ ಆವರಣದವರೆಗೂ ಹರಿದಿದೆ.
ಭಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದ್ದು, 4 ಅಡಿಯಷ್ಟು ನೀರು ತುಂಬಿಕೊಂಡಿದೆ. ಭಾರೀ ಗಾತ್ರದ ವಾಹನಗಳಷ್ಟೇ ಪ್ರದೇಶಗಳಲ್ಲಿ ಸಂಚಾರಕ್ಕೆ ಸಾಧ್ಯವಾಗುತ್ತಿದ್ದು, ಸಣ್ಣ ಪುಟ್ಟ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮುಜಾಗ್ರತಾ ಕ್ರಮವಾಗಿ ಒಂದು ತಿಂಗಳಿಂದ ಭಾಗಮಂಡಲದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.
24 ಗಂಟೆಗಳಲ್ಲಿ 5 ಇಂಚಿಗೂ ಅಧಿಕ ಮಳೆ:
ಕಳೆದ ರಾತ್ರಿಯಿಂದ ಮಳೆ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಇಳಿಕೆಯಾಗಿದೆ. ಜಲಾಶಯಕ್ಕೆ ಒಳಹರಿವು 16,120 ಕ್ಯೂಸೆಕ್ ನೀರು ಇದ್ದು, ಕಾವೇರಿ ನದಿಗೆ 18,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕಳೆದ ರಾತ್ರಿ ಡ್ಯಾಂ ಅಧಿಕಾರಿಗಳು 36,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆ. ಸದ್ಯದ ಮಟ್ಟಿಗೆ ಮಳೆ ಆರ್ಭಟ ಕಡಿಮೆಯಾಗಿದ್ದು, ಕೊಡಗು ಜಿಲ್ಲೆ ಶಾಂತವಾಗಿದೆ.
ಕಳೆದ 24 ಗಂಟೆಗಳಲ್ಲಿ 5 ಇಂಚಿಗೂ ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 118.77 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 14.02 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1310.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1869.78 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 173.43 ಮಿ.ಮೀ. ಕಳೆದ ವರ್ಷ ಇದೇ ದಿನ 26.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1923.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2618.21 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 977.58 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1481.37 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 106.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1030.46 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1509.77 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 158.60, ನಾಪೋಕ್ಲು 151.20, ಸಂಪಾಜೆ 186.50, ಭಾಗಮಂಡಲ 197.40, ವಿರಾಜಪೇಟೆ ಕಸಬಾ 68.40, ಹುದಿಕೇರಿ 87.60, ಶ್ರೀಮಂಗಲ 91, ಪೊನ್ನಂಪೇಟೆ 85, ಅಮ್ಮತ್ತಿ 69.50, ಬಾಳೆಲೆ 56, ಸೋಮವಾರಪೇಟೆ ಕಸಬಾ 134.20, ಶನಿವಾರಸಂತೆ 89.60, ಶಾಂತಳ್ಳಿ 215, ಕೊಡ್ಲಿಪೇಟೆ 78, ಕುಶಾಲನಗರ 47, ಸುಂಟಿಕೊಪ್ಪ 76 ಮಿ.ಮೀ.ಮಳೆಯಾಗಿದೆ.