ಮೊಹಾಲಿಯಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ಗಳಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ನಾಯಕ ಕೆಎಲ್ ರಾಹುಲ್ ಅವರ ಅಜೇಯ 58 ರನ್ಗಳ ಇನ್ನಿಂಗ್ಸ್ ಹಾಗೂ ಆರಂಭಿಕರಿಬ್ಬರ ಶತಕದ ಜೊತೆಯಾಟದ ಜೊತೆಗೆ ಸೂರ್ಯಕುಮಾರ್ ಅವರ ನಿರ್ಣಾಯಕ ಅರ್ಧಶತಕದ ನೆರವಿನೊಂದಿಗೆ ಭಾರತ ಈಗ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ವಾಸ್ತವವಾಗಿ ಈ ಪಂದ್ಯದಲ್ಲಿ ಟೀಂ ಇಂಡಿಯಾ ತಂಡದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಕುಲ್ದೀಪ್ ಯಾದವ್ ಇಲ್ಲದೆ ಕಣಕ್ಕಿಳಿದಿತ್ತು. ಅದಾಗ್ಯೂ ಯುವ ಪಡೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊಹಮ್ಮದ್ ಶಮಿ ದಾಳಿಗೆ ನಲುಗಿ 276 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತ ನಾಲ್ವರ ಅರ್ಧಶತಕದ ಆಧಾರದ ಮೇಲೆ 49ನೇ ಓವರ್ನಲ್ಲಿ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಏಕದಿನ ಮಾದರಿಯಲ್ಲಿ ನಂಬರ್ 1 ಸ್ಥಾನವನ್ನೂ ಕೂಡ ಆಲಂಕರಿಸಿದೆ.
2023ರ ವಿಶ್ವಕಪ್ಗೆ ಸಿದ್ಧತೆಯಾಗಿ ನಡೆಯುತ್ತಿರುವ ಈ ಸರಣಿಯ ಮೊದಲ ಮತ್ತು ಎರಡನೇ ಪಂದ್ಯಗಳಿಗೆ ಟೀಂ ಇಂಡಿಯಾದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆಸ್ಟ್ರೇಲಿಯಾ ಕೂಡ ತನ್ನ ಪ್ರಮುಖ ಆಟಗಾರರಿಲ್ಲದೆ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಹೀಗಿರುವಾಗ ಬಹುತೇಕ ಸಮಬಲದ ಪೈಪೋಟಿಯನ್ನು ನಿರೀಕ್ಷಿಸಲಾಗಿತ್ತು. ಆದರೆ ಆರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಂ ಇಂಡಿಯಾ ಜಯಭೇರಿ ಬಾರಿಸಿದೆ. ಇಷ್ಟೇ ಅಲ್ಲ, ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 27 ವರ್ಷಗಳ ನಂತರ ಏಕದಿನ ಪಂದ್ಯವನ್ನು ಗೆದ್ದ ಸಾಧನೆ ಮಾಡಿದೆ.