ಮೈಸೂರು: ರಾಜ್ಯಾದ್ಯಂತ ಮಳೆಯ ಕೊರತೆ ಉಂಟಾಗಿ ಬರ ವ್ಯಾಪಿಸಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಆದ್ದರಿಂದ ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. 2021ರಲ್ಲಿ ಕೋವಿಡ್ ಕಾರಣದಿಂದಾಗಿ ಸರಳ ದಸರಾ ಆಚರಿಸಲಾಗಿತ್ತು. ಜಂಬೂ ಸವಾರಿ ಮೆರವಣಿಗೆ ನಡೆದರೂ ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳಿಸಲಾಗಿತ್ತು. ಕಳೆದ ವರ್ಷ ಅದ್ಧೂರಿ ದಸರಾ ಆಚರಣೆ ಮಾಡಲಾಗಿತ್ತು, ಆದರೆ ಈ ಬಾರಿ ಮಳೆ ಕೊರತೆಯಿಂದಾಗಿ ಬರ ವ್ಯಾಪಿಸಿರುವುದರಿಂದ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ.